ಬೆಂಗಳೂರು: ರಾಜ್ಯದಲ್ಲಿ ಪ್ರವಾಸೋದ್ಯಮಕ್ಕೆ ಹೆಚ್ಚು ಅವಕಾಶವಿದ್ದು, 320 ಕಿ.ಮೀ ಕರಾವಳಿ ಪ್ರದೇಶವಿದೆ. ನಮಗೆ ಇದೂವರೆಗೆ ಅದನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಸಾಧ್ಯವಾಗಿಲ್ಲ. ಹೀಗಾಗಿ ಕರಾವಳಿ ಪ್ರದೇಶದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಕ್ರಿಯಾ ಯೋಜನೆ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸರ್ಕಾರ ಮಂಗಳವಾರ ಸೂಚನೆ ನೀಡಿದೆ.
ಮಂಗಳವಾರ ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ಎಲ್ಲ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕರಾವಳಿಯಲ್ಲಿ ಸಿಆರ್ಝೆಡ್ ಕಾಯ್ದೆಯಿಂದಾಗಿ ಅಭಿವೃದ್ಧಿಗೆ ಕೆಲವು ತೊಡಕುಗಳಿದ್ದು, ಇದನ್ನು ಬಗೆಹರಿಸಲು ಪ್ರಯತ್ನಿಸಬೇಕು ಎಂದರು.

ಪ್ರವಾಸೋದ್ಯಮಕ್ಕೆ ಒತ್ತು ನೀಡುವ ಮೂಲಕ ಉದ್ಯೋಗ ಸೃಷ್ಟಿ ಸಾಧ್ಯವಿದೆ. ಹೊಸ ಪ್ರವಾಸೋದ್ಯಮ ನೀತಿ ರಚಿಸಲು ನಿರ್ಧರಿಸಲಾಗಿದ್ದು, ಈ ಕುರಿತು ವಿಸ್ತೃತವಾದ ಸಮಾಲೋಚನೆ ನಡೆಸಬೇಕು ಎಂದು ಹೇಳಿದರು.
ಅನೇಕ ರಾಜ್ಯಗಳಿಗೆ ಪ್ರವಾಸೋದ್ಯಮವೇ ಪ್ರಮುಖ ಆದಾಯ. ನೆರೆಯ ಕೇರಳದಷ್ಟು ಕೂಡಾ ಪ್ರವಾಸೋದ್ಯಮ ಅಭಿವೃದ್ಧಿ ನಮಗೆ ಸಾಧ್ಯವಾಗಿಲ್ಲ. ಪ್ರವಾಸೋದ್ಯಮದ ಸಮಗ್ರ ಅಭಿವೃದ್ಧಿಗೆ ನೀಲನಕಾಶೆ ಸಿದ್ಧಪಡಿಸಬೇಕು ಎಂದು ಸಲಹೆ ನೀಡಿದರು.
ಪ್ರವಾಸೋದ್ಯಮ ಮೂಲಸೌಲಭ್ಯಗಳು ಅತ್ಯಂತ ಕಡಿಮೆಯಿದೆ. ಮಧುಗಿರಿಯಲ್ಲಿರುವ ಏಕಶಿಲಾ ಬೆಟ್ಟ ಹಿಂದಿನ ಬಾರಿ ಸರ್ಕಾರ ಇದ್ದಾಗ ಅಭಿವೃದ್ಧಿ ಬಜೆಟ್ನಲ್ಲಿ ಘೋಷಣೆ ಮಾಡಿದ್ದರೂ, ಇದುವರೆಗೆ ಯಾವುದೇ ಅಭಿವೃದ್ಧಿಯಾಗಿಲ್ಲ. ಪ್ರವಾಸೋದ್ಯಮಕ್ಕೆ ಪೂರಕವಾದ ವಾತಾವರಣ ಸೃಷ್ಟಿಸಿದರೆ ಮಾತ್ರ ಬಂಡವಾಳ ಹೂಡಿಕೆದಾರರು ಮುಂದೆ ಬರುತ್ತಾರೆ. ಪ್ರವಾಸಿ ತಾಣಗಳ ಅಭಿವೃದ್ಧಿ ಸಾಧ್ಯತೆಗಳನ್ನು ಜಿಲ್ಲಾಧಿಕಾರಿಗಳು ಗುರುತಿಸಬೇಕು. ಖಾಸಗಿ ಸಹಭಾಗಿತ್ವದಲ್ಲಿ ಮಾತ್ರವಲ್ಲ ಸರ್ಕಾರದ ವತಿಯಿಂದಲೂ ಹೆಜ್ಜೆ ಇರಿಸಬೇಕು. ಹೊಸ ಪ್ರವಾಸೋದ್ಯಮ ನೀತಿಯಲ್ಲಿ ಎಲ್ಲಾ ಅಂಶಗಳನ್ನು ಸೇರಿಸಲಾಗುವುದು. ಇದಕ್ಕೆ ಪೂರಕವಾಗಿ ಅನುದಾನವನ್ನು ಒದಗಿಸಲಾಗುವುದು ಎಂದು ತಿಳಿಸಿದರು.