ಭಾರೀ ಮಳೆಯಿಂದ ಮನೆ ಗೋಡೆ ಕುಸಿತ; ಅವಳಿ ಮಕ್ಕಳು ಸೇರಿ ಮೂವರ ದಾರುಣ ಸಾವು

ಹಾವೇರಿ: ನಿರಂತರ ಮಳೆ ಹಿನ್ನೆಲೆ ಮನೆಯ ಮೇಲ್ಚಾವಣಿ ಕುಸಿದು ಮೂವರು ಸಾವನ್ನಪ್ಪಿದ್ದು, ಮೂವರು ಗಂಭೀರ ಗಾಯಗೊಂಡ ಘಟನೆ ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಮಾದಾಪುರ ಗ್ರಾಮದಲ್ಲಿ ನಡೆದಿದೆ.

ಕೆಲ ದಿನಗಳಿಂದ ಸುರಿದ ಭಾರೀ ಮಳೆಗೆ ಮನೆ ಸೋರುತ್ತಿದ್ದು, ಇಂದು ಬೆಳಗ್ಗೆ ಗೋಡೆ ಕುಸಿದಿದೆ. ಮೃತ ಚೆನ್ನಮ್ಮ ಹರಕುಣಿ (30),ಆಕೆಯ ಅವಳಿ ಹೆಣ್ಣು ಮಕ್ಕಳಾದ ಅಮೂಲ್ಯ ಮತ್ತು ಅನನ್ಯಾ (2) ಒಂದೇ ಕೋಣೆಯಲ್ಲಿ ಮಲಗಿದ್ದರು. ಅವರ ತಾಯಿ ಯಲ್ಲಮ್ಮ (70) ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಯಗೊಂಡಿರುವ ಮುತ್ತಣ್ಣ ಹರಕುಣಿ (70) ಮತ್ತು ಸುನೀತಾ (35) ಅವರನ್ನು ಹಾವೇರಿಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಕಳೆದ ಮೂರು ದಿನಗಳಿಂದ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಕುಟುಂಬದವರಿಗೆ ಹಸ್ತಾಂತರಿಸಲಾಗುವುದು. ಕೃಷಿ ಮಾಡಿ ಜೀವನ ಸಾಗಿಸುತ್ತಿರುವ ಕುಟುಂಬ ಮಾದಾಪುರ ಗ್ರಾಮದಲ್ಲಿ ಸಣ್ಣ ಹಿಡುವಳಿ ಭೂಮಿ ಹೊಂದಿದೆ.

ಘಟನೆ ಬಗ್ಗೆ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ ಆಘಾತ ವ್ಯಕ್ತಪಡಿಸಿದ್ದು, ಇಂದು ಹಾವೇರಿಯಲ್ಲಿ ಕುಟುಂಬ ಸದಸ್ಯರನ್ನು ಭೇಟಿ ಮಾಡುವ ನಿರೀಕ್ಷೆಯಿದೆ. ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಸೂಕ್ತ ಪರಿಹಾರ ನೀಡುವಂತೆ ಒತ್ತಾಯಿಸಿದ ಅವರು, ಗಾಯಗೊಂಡ ಕುಟುಂಬದ ಸದಸ್ಯರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸುವಂತೆ ಆಗ್ರಹಿಸಿದ್ದಾರೆ.

ಪೇಜ್ ಲೈಕ್ ಮಾಡಿ ಮತ್ತು ಸಬ್ಸ್ಕೈಬ್ ಮಾಡಿ

Leave a Reply

Your email address will not be published. Required fields are marked *