ರಾಜ್ಯದಲ್ಲಿ ಆ.14ರಿಂದ ಭಾರೀ ಮಳೆ ಮುನ್ಸೂಚನೆಯಿದ್ದು, ಪ್ರವಾಹ ಪರಿಸ್ಥಿತಿ ಎದುರಿಸಲು ಸನ್ನದ್ಧರಾಗಿರಿ

ಬೆಂಗಳೂರು: ರಾಜ್ಯದಲ್ಲಿ ಆ.14ರಿಂದ 20 ರವರೆಗೆ ಭಾರೀ ಮಳೆಯಾಗುವ ಮುನ್ಸೂಚನೆಗಳಿದ್ದು, ಪ್ರವಾಹ ಪರಿಸ್ಥಿತಿ ಎದುರಿಸಲು ಸನ್ನದ್ಧರಾಗಿರುವಂತೆ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಅವರು ಸೋಮವಾರ ಸೂಚನೆ ನೀಡಿದ್ದಾರೆ.

ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಅಧಿಕಾರಿಗಳೊಂದಿಗೆ ಪರಿಶೀಲನೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಸಚಿವರು ಮಾತನಾಡಿದರು.

ದಕ್ಷಿಣ ಒಳನಾಡು ಪ್ರದೇಶವನ್ನು ಹೊರತುಪಡಿಸಿ ಉಳಿದೆಡೆಗಳಲ್ಲಿ ನೈರುತ್ಯ ಮುಂಗಾರು ಆಗಮಿಸಿದೆ. ಅದಾಗ್ಯೂ ಆಗಸ್ಟ್ 14ರ ನಂತರ ಕಿತ್ತೂರು ಕರ್ನಾಟಕ ಮತ್ತು ಮಲೆನಾಡು ಪ್ರದೇಶಗಳಲ್ಲಿ ಆಗಸ್ಟ್ 20 ರವರೆಗೆ ಹೆಚ್ಚಿನ ಮಳೆಯಾಗುವ ನಿರೀಕ್ಷೆಗಳಿವೆ. ಹೀಗಾಗಿ, ಸನ್ನದ್ಧರಾಗಿರುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಕರ್ನಾಟಕ-ಮಹಾರಾಷ್ಟ್ರ ಗಡಿಭಾಗ ಹಾಗೂ ಕೃಷ್ಣ-ಕಾವೇರಿ ನದಿಪಾತ್ರದ ಪ್ರದೇಶಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ದಟ್ಟವಾಗಿದೆ. ಈ ನಿಟ್ಟಿನಲ್ಲಿ ಜೀವಹಾನಿಯಂತಹ ಅನಾಹುತ ತಪ್ಪಿಸಲು ಮತ್ತಷ್ಟು ಪೂರ್ವ ತಯಾರಿ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ.

ಮಳೆಯಾಗುವ ಸಂದರ್ಭದಲ್ಲಿ ನದಿ ಉಕ್ಕಿಹರಿಯುತ್ತದೆ, ಇದೇ ವೇಳೆ ಅಣೆಕಟ್ಟೆಗಳಿಂದಲೂ ನೀರು ಹರಿಸಿದರೆ ಪ್ರವಾಹ ಸ್ಥಿತಿ ಉಂಟಾಗಿ ಜನ ಪರಿತಪಿಸುವ ಸ್ಥಿತಿ ಎದುರಾಗುತ್ತದೆ. ಹೀಗಾಗಿ ಅಣೆಕಟ್ಟೆಗಳು ತುಂಬುವವರೆಗೂ ಕಾಯದೆ ಜಲಾಶಯಗಳ ಒಳಹರಿವನ್ನು ನಿಯಮಿತವಾಗಿ ಬಿಡುಗಡೆ ಮಾಡುವ ಮೂಲಕ ನೆರೆಯನ್ನು ನಿಯಂತ್ರಿಸಬಹುದು. ಈ ಮಾದರಿಯ ನೀರಿನ ನಿರ್ವಹಣೆ ಬಗ್ಗೆಯೂ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಇದಲ್ಲದೆ, ಶಿಥಿಲಾವಸ್ಥೆಯಲ್ಲಿರುವ ಶಾಲೆಗಳು ಹಾಗೂ ಗುಡ್ಡದ ಅಂಚಿನಲ್ಲಿ ಕುಸಿದುಬೀಳುವ ಸಾಧ್ಯತೆಗಳಿರುವ ಮನೆಗಳನ್ನು ಗುರುತಿಸಿ ಜನವಾಸ ನಿಷೇಧಿಸಲು ಹಾಗೂ ಜನರನ್ನು ಸುರಕ್ಷಿತವಾಗಿ ಕಾಳಜಿ ಕೇಂದ್ರಕ್ಕೆ ರವಾನಿಸುವಂತೆಯೂ ಸೂಚಿಸಲಾಗಿದೆ ಎಂದು ತಿಳಿಸಿದರು.

ಈ ಬಾರಿ ವಾಡಿಕೆಗಿಂತ ಸರಾಸರಿ ಶೇ. 26ರಷ್ಟು ಹೆಚ್ಚು ಮಳೆಯಾಗಿದೆ. ರಾಜ್ಯದಲ್ಲಿ ವಾಡಿಕೆ ಪ್ರಕಾರ ಈವರೆಗೆ 553 ಮಿಲಿ ಮೀಟರ್ ಮಳೆಯಾಗಬೇಕಿದ್ದರಲ್ಲಿ, ಸರಾಸರಿ 699ರಷ್ಟು ಮಿ. ಮೀ ಮಳೆಯಾಗಿದೆ. ದಕ್ಷಿಣ ಒಳನಾಡು ವಾಡಿಕೆ 171, ವಾಸ್ತವಿಕ- 246, ಉತ್ತರ ಒಳನಾಡು ವಾಡಿಕೆ- 260 ವಾಸ್ತವಿಕ- 322, ಮಲೆನಾಡು- ವಾಡಿಕೆ- 1127, ವಾಸ್ತವಿಕ- 1361, ಕರಾವಳಿ ವಾಡಿಕೆ- 2299, ವಾಸ್ತವಿಕ 2947 ಮಿ.ಮೀ. ಮಳೆಯಾಗಿದೆ.

ಯಾದಗಿರಿ ಜಿಲ್ಲೆಯಲ್ಲಿ ಮಾತ್ರ ವಾಡಿಕೆಗಿಂತ ಶೇ.5ರಷ್ಟು ಮಳೆ ಕಡಿಮೆಯಾಗಿದೆ. ಉಳಿದ ಎಲ್ಲ ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚಾಗಿದೆ. ಕೋಲಾರ, ಚಿಕ್ಕಬಳ್ಳಾಪುರ, ಕೊಪ್ಪಳ, ರಾಯಚೂರು, ಯಾದಗಿರಿ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ವಾಡಿಕೆಗಿಂತ ಕಡಿಮೆಯಾಗಿತ್ತು. ಆದರೆ ಕಳೆದ 10 ದಿನಗಳಲ್ಲಿ ಸುಧಾರಿಸಿದ ಮಳೆಯು ಕೊರತೆ ಸರಿದೂಗಿಸಿದೆ.

ಪೇಜ್ ಲೈಕ್ ಮಾಡಿ ಮತ್ತು ಸಬ್ಸ್ಕೈಬ್ ಮಾಡಿ

Leave a Reply

Your email address will not be published. Required fields are marked *