ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೊಮ್ಮಾಯಿ, ಹೆಚ್‌ಡಿಕೆ

ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಹೆಚ್​​ಡಿ ಕುಮಾರಸ್ವಾಮಿಯವರು ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.  ಚನ್ನಪಟ್ಟಣದಲ್ಲಿ ವಿಧಾನಸಭೆ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಲಿದೆ.

ಜೆಡಿಎಸ್ ನಾಯಕ ಹೆಚ್​ಡಿ ಕುಮಾರಸ್ವಾಮಿ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರ ಬೆಳಗ್ಗೆ ತಿರುಪತಿಗೆ ಭೇಟಿ ನೀಡಿ ತಿಮ್ಮಪ್ಪನ ದರ್ಶನ ಪಡೆದರು. ಅಲ್ಲಿಂದ ನೇರವಾಗಿ ಬೆಂಗಳೂರಿಗೆ ಆಗಮಿಸಿದ ಅವರು ವಿಧಾನಸೌಧಕ್ಕೆ ತೆರಳಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಸಿಪಿ ಯೋಗೇಶ್ವರ್ ವಿರುದ್ಧ‌ 15,215 ಮತಗಳಿಂದ ಗೆದ್ದಿದ್ದರು. 

ಇದೇ ವೇಳೆ ಹಾವೇರಿ ಲೋಕಸಭಾ ಕ್ಷೇತ್ರದಿಂದ ಶಾಸಕ ಸ್ಥಾನಕ್ಕೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿಯವರು ರಾಜೀನಾಮೆ ನೀಡಿದ್ದಾರೆ. ಬೊಮ್ಮಾಯಿಯವರು ಲೋಕಸಭಾ ಚುನಾವಣೆಯಲ್ಲಿ ಗೆದ್ದು ಸಂಸದರಾಗಿ ಆಯ್ಕೆಯಾಗಿದ್ದಾರೆ. ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಅವರನ್ನು ಕಚೇರಿಯಲ್ಲಿ ಭೇಟಿಯಾಗಿ ರಾಜೀನಾಮೆ ಪತ್ರ ಸಲ್ಲಿಸಿದರು. ಈ ವೇಳೆ ಬೊಮ್ಮಾಯಿಯವರಿಗೆ ವಿಪಕ್ಷ ನಾಯಕ ಆರ್.ಅಶೋಕ್, ಶಾಸಕ ಮುನಿರಾಜು, ಜಿಟಿ ದೇವೇಗೌಡ ಹಾಗೂ ಭೋಜೇ ಗೌಡ ಅವರು ಸಾಥ್ ನೀಡಿದರು. ಬಳಿಕ ರಾಜೀನಾಮೆ ಸ್ವೀಕಾರ ಮಾಡಿದ ಸ್ಪೀಕರ್ ಖಾದರ್ ಅವರು ಬೊಮ್ಮಾಯಿಯವರಿಗೆ ಶುಭಕೋರಿದ್ದಾರೆ.

Leave a Reply

Your email address will not be published. Required fields are marked *