ಪಶ್ಚಿಮ ಬಂಗಾಳದಲ್ಲಿ ಎಕ್ಸ್‌ಪ್ರೆಸ್ ರೈಲಿಗೆ ಗೂಡ್ಸ್ ರೈಲು ಡಿಕ್ಕಿ – ಐವರ ದುರ್ಮರಣ 

ಗೂಡ್ಸ್ ರೈಲೊಂದು ಎಕ್ಸ್‌ಪ್ರೆಸ್ ರೈಲಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮದಿಂದ ಸ್ಥಳದಲ್ಲೇ ಐವರು ಸಾವನ್ನಪ್ಪಿದ್ದು, 25 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯಲ್ಲಿ ನಡೆದಿದೆ.

ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ರೈಲು ಅಸ್ಸಾಂನ ಸಿಲ್ಚಾರ್‌ನಿಂದ ಕೋಲ್ಕತ್ತಾದ ಸೀಲ್ದಾಗೆ ಚಲಿಸುತ್ತಿತ್ತು. ಈ ಸಂದರ್ಭ ನ್ಯೂ ಜಲ್ಪೈಗುರಿ ಸಮೀಪದ ರಂಗಪಾಣಿ ನಿಲ್ದಾಣದ ಬಳಿ ಗೂಡ್ಸ್ ರೈಲು ಹಿಂದಿನಿಂದ ಡಿಕ್ಕಿ ಹೊಡೆದಿದ್ದರಿಂದ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್‌ನ ಎರಡು ಬೋಗಿಗಳು ಹಳಿತಪ್ಪಿವೆ ಎಂದು ವರದಿಗಳ ಮೂಲ ತಿಳಿಸಿವೆ.

ಘಟನಾ ಸ್ಥಳಕ್ಕೆ ವೈದ್ಯರು ಮತ್ತು ವಿಪತ್ತು ನಿರ್ವಹಣಾ ತಂಡಗಳನ್ನು ರವಾನಿಸಲಾಗಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಮಮತಾ ಬ್ಯಾನರ್ಜಿ ಡಾರ್ಜಿಲಿಂಗ್ ಜಿಲ್ಲೆಯ ಫನ್ಸಿಡೆವಾ ಪ್ರದೇಶದಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದ ಬಗ್ಗೆ ತಿಳಿದು ಆಘಾತವಾಗಿದೆ. ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ. ಡಿಎಂ, ಎಸ್ಪಿ, ವೈದ್ಯರು, ಅಂಬುಲೆನ್ಸ್ ಮತ್ತು ವಿಪತ್ತು ತಂಡಗಳು ಘಟನಾ ಸ್ಥಳಕ್ಕೆ ಧಾವಿಸಿವೆ. ಪಾರುಗಾಣಿಕಾ, ಚೇತರಿಕೆ, ವೈದ್ಯಕೀಯ ನೆರವಿಗಾಗಿ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *